ಹಣತೆ ಹಚ್ಚುತ್ತೇನೆ ನಾನೂ. ಈ ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ ; ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆ ಇದರಲ್ಲಿ ಮುಳುಗಿ ಕರಗಿರುವಾಗ ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ. ಹಣತೆ ಹಚ್ಚುತ್ತೇನೆ ನಾನೂ ; ಈ ಕತ್ತಲಿನಿಂದ ಬೆಳಕಿನ ಕಡೆಗೆ ನಡೆದೇನೆಂಬ ಆಸೆಯಿಂದಲ್ಲ. ಕತ್ತಲಿನಿಂದ ಕತ್ತಲಿಗೇ ತಡಕಾಡಿಕೊಂಡು ಬಂದಿವೆ ಹೆಜ್ಜೆ ಶತಮಾನದಿಂದಲೂ. ನಡು ನಡುವೆ ಒಂದಷ್ಟು ಬೆಳಕು ಬೇಕೆಂದು ಅಗಾಗ ಕಡ್ಡಿ ಗೀಚಿದ್ದೇವೆ, ದೀಪ ಮುಡಿಸಿದ್ದೇವೆ, ವೇದ, ಶಾಸ್ತ್ರ, ಪುರಾಣ, ಇತಿಹಾಸ, ಕಾವ್ಯ, ವಿಜ್ಞಾನಗಳ ಮತಾಪು-ಪಟಾಕಿ-ಸುರುಸುರುಬತ್ತಿ-ಹೂಬಾಣ ಸುಟ್ಟಿದ್ದೇವೆ. ‘ತಮಸೋಮಾ ಜ್ಯೋತಿರ್ಗಮಯಾ’ ಎನ್ನುತ್ತ ಬರೀ ಬೂದಿಯನ್ನೇ ಕೊನೆಗೆ ಕಂಡಿದ್ದೇವೆ. ನನಗೂ ಗೊತ್ತು, ಈ ಕತ್ತಲೆಗೆ ಕೊನೆಯಿರದ ಬಾಯಾರಿಕೆ, ಎಷ್ಟೊಂದು ಬೆಳಕನ್ನು ಇದು ಉಟ್ಟರೂ, ತೊಟ್ಟರೂ, ತಿಂದರೂ, ಕುಡಿದರೂ ಇದಕ್ಕೆ ಇನ್ನೂ ಬೇಕು ಇನ್ನೂ ಬೇಕು ಎನ್ನುವ ಬಯಕೆ. ಆದರೂ ಹಣತೆ ಹಚ್ಚುತ್ತೇನೆ ನಾನೂ ; ಕತ್ತಲೆಯನ್ನು ದಾಟುತ್ತೇನೆಂಬ ಭ್ರಮೆಯಿಂದಲ್ಲ, ಇರುವಷ್ಟು ಹೊತ್ತು ನಿನ್ನ ಮುಖ ನಾನು, ನನ್ನ ಮುಖ ನೀನು ನೋಡಬಹುದೆಂಬ ಒಂದೇ ಒಂದು ಆಸೆಯಿಂದ ; ಹಣತೆ ಆರಿದ ಮೇಲೆ, ನೀನು ಯಾರೋ, ಮತ್ತೆ ನಾನು ಯಾರೋ. - ಜಿ ಎಸ್ ಶಿವರುದ್ರಪ್ಪ